Friday, 19 April 2019

22 ಏಪ್ರಿಲ್ 2019

ಬಿಳಿ/ಸೋಮ/ಪಾಸ್ಖ ಹಬ್ಬದ ಅಷ್ಟಮಿಯ 2ನೇ ದಿನ 
1ನೇ ವಾಚನ ಪ್ರೇ.ಕಾ 2: 14, 22-23 
ಕೀರ್ತನೆ - 16: 1-2, 5, 7-11 
ಶುಭಸಂದೇಶ -ಮತ್ತಾಯ 28: 8-15 

1ನೇ ವಾಚನ ಪ್ರೇ.ಕಾ 2: 14, 22-23 
14 : ಪೇತ್ರನ ಪ್ರಬೋಧನೆ ಆಗ ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನ ಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: “ಯೆಹೂದ್ಯ ಸ್ವಜನರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ.
22 “ಇಸ್ರಯೇಲ್ ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತ ಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ.
23 ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್ ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.
24 : ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.
25 : ಅವರನ್ನು ಕುರಿತು ದಾವೀದನು ಹೀಗೆಂದಿದ್ದಾನೆ: ‘ಪ್ರಭು ಇಹನು ಎನ್ನ ಕಣ್ಮುಂದೆ ಸತತ ನಾ ಹೆದರದಂತೆ ಆತನಿಹನು ಎನ್ನ ಹತ್ತಿರ.
26 : ಇದಕಾರಣ ಹರ್ಷಿಸಿತು ಎನ್ನ ಹೃದಯ ತುಳುಕಿತು ಸಂತಸ ಎನ್ನ ನಾಲಗೆಯಿಂದ. ನಂಬಿ ನಿರೀಕ್ಷೆಯಿಂದಿರುವುದು ಎನ್ನ ಮತ್ರ್ಯದೇಹ.
27 : ಏಕೆನೆ, ದೂಡಲಾರೆ ಪಾತಾಳಕ್ಕೆ ನೀನೆನ್ನ ಜೀವಾತ್ಮವನು, ಕೊಳೆಯಬಿಡಲಾರೆ ನೀನೊಲಿದಾತನನು.
28 : ಅಮರ ಜೀವಮಾರ್ಗವನೆನಗೆ ತೋರ್ಪಡಿಸಿದೆ ನಿನ್ನ ಶ್ರೀ ಸಾನ್ನಿಧ್ಯ ಸಂತಸದಿಂದೆನ್ನ ಭರಿತನಾಗಿಸುವೆ.’
29 : “ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಪಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು; ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವಂತೆ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ.
30 : ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ್ದ ವಾಗ್ದಾನವನ್ನು ಆತನು ಮರೆತಿರಲಿಲ್ಲ.
31: ಹೀಗಿರುವಲ್ಲಿ ಕ್ರಿಸ್ತಯೇಸುವಿನ ಪುನರುತ್ಥಾನವನ್ನು ಮುಂಚಿತವಾಗಿ ಅರಿತು ಅದರ ವಿಷಯವಾಗಿ ಹೀಗೆಂದು ಪ್ರವಾದನೆ ಮಾಡಿದ: ‘ಆತನನನ್ನು ಪಾತಾಳಕ್ಕೆ ದೂಡಲಿಲ್ಲ; ದೇಹ ಕೊಳೆತುಹೋಗಲು ಬಿಡಲಿಲ್ಲ.’
32: ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.
33: ಯೇಸು, ದೇವರ ಬಲಪಾಶ್ರ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನ ಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ಕೀರ್ತನೆ - 16: 1-2, 5, 7-11 
ನೀಡು ದೇವಾ ರಕ್ಷಣೆಯನು / ನಾ ನಿನಗೆ ಶರಣಾಗತನು //
1 : ನೀಡು ದೇವಾ ರಕ್ಷಣೆಯನು / ನಾ ನಿನಗೆ ಶರಣಾಗತನು //
2 : “ನೀನೇ ನನ್ನೊಡೆಯ”ನೆಂದು ನಾ ನುಡಿದೆ / ನಿನ್ನ ಹೊರತು ನನಗಿಲ್ಲ ಒಳಿತು” ಎಂದೆ /
3 : ಸಂತರು ನಾಡಿಗೆ ತಿಲಕವು / ಅವರಲ್ಲಿದೆ ಎನಗೆ ಒಲವು //
4 : ಅನ್ಯದೇವರನ್ನು ಬಯಸುವವರನ್ನು ಕಾದಿದೆ ಕಠಿಣ ಕಷ್ಟ / ಅವರಂತೆ ರಕ್ತಪಾನತರ್ಪಣೆ ಮಾಡಲೆನಗಿಲ್ಲ ಇಷ್ಟ / ಆ ದೇವರುಗಳ ನಾಮೋಚ್ಚಾರಣೆ ನನ್ನ ತುಟಿಗೆ ಅನಿಷ್ಟ //
5 : ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ / ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ //
6 : ನನ್ನ ಪಾಲಿಗೆ ಬಂದುದು ರಮಣೀಯವಾದುದು / ನನಗದೆ ಪರಮಾನಂದ ದಾಯಕವಾದುದು //
7 : ಪ್ರಭುವಿಗೆನ್ನ ಧನ್ಯವಾದ - ಆತನೇ ನನಗೆ ಮಾರ್ಗದರ್ಶಕ / ಅಂಧಕಾರದೊಳೂ ನನ್ನ ಮನಸ್ಸಾಕ್ಷಿಯೆ ನನಗೆ ಬೋಧಕ //
8 : ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ / ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ? //
9 : ಇದು ಕಾರಣ ಹರ್ಷದಿಂದಿದೆ ಎನ್ನಯ ಹೃದಯ / ಆನಂದಗೊಂಡಿದೆ ಮನ, ಸುರಕ್ಷಿತವಿದೆ ಕಾಯ //
10 : ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ / ಬಿಟ್ಟುಕೊಡುವುದಿಲ್ಲ ನಿನ್ನ ಈ ಭಕ್ತನನು ಪಾತಾಳಕೆ //
11 : ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು / ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು / ನಿನ್ನ ಬಲಗೈ ನೀಡುವುದು ನಿತ್ಯ ಭಾಗ್ಯವನು //


ಶುಭಸಂದೇಶ -ಮತ್ತಾಯ 28: 8-15 
1: ‘ಸಬ್ಬತ್’ ದಿನ ಕಳೆದಿತ್ತು. ಭಾನುವಾರ ಬೆಳಗಾಗುವುದರಲ್ಲಿತ್ತು. ಮಗ್ದಲದ ಮರಿಯಳು ಮತ್ತು ಆ ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.
2: ಇದ್ದಕ್ಕಿದ್ದಂತೆ ಭೂಮಿ ಗಡಗಡನೆ ನಡುಗಿತು. ಆಗ ದೇವದೂತನು ಸ್ವರ್ಗದಿಂದ ಇಳಿದುಬಂದನು. ಸಮಾಧಿಯ ಕಲ್ಲನ್ನು ಹಿಂದಕ್ಕೆ ಉರುಳಿಸಿ ಅದರ ಮೇಲೆ ಕುಳಿತುಕೊಂಡನು.
3: ಆತನ ರೂಪ ಮಿಂಚಿನಂತೆ ಹೊಳೆಯುತ್ತಿತ್ತು; ಉಡುಪು ಹಿಮದಂತೆ ಬೆಳ್ಳಗಿತ್ತು.
4: ಕಾವಲಿನವರು ಆತನನ್ನು ಕಂಡು ಭಯದಿಂದ ನಡುಗುತ್ತಾ ಸತ್ತಂತಾದರು.
5: ಆಗ ದೂತನು ಆ ಮಹಿಳೆಯರಿಗೆ, “ಹೆದರಬೇಡಿ, ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆ. ಅವರು ಇಲ್ಲಿಲ್ಲ;
6 : ಅವರೇ ಹೇಳಿದಂತೆ ಪುನರುತ್ಥಾನ ಹೊಂದಿದ್ದಾರೆ. ಬನ್ನಿ, ಅವರನ್ನಿಟ್ಟಿದ್ದ ಸ್ಥಳವನ್ನು ನೋಡಿ.
7: ಈಗ ಬೇಗನೆ ಹೋಗಿ, ಅವರ ಶಿಷ್ಯರಿಗೆ, ‘ಸತ್ತಿದ್ದವರು ಪುನರುತ್ಥಾನ ಹೊಂದಿದ್ದಾರೆ; ಅವರು ನಿಮಗಿಂತ ಮುಂಚಿತವಾಗಿ ಗಲಿಲೇಯಕ್ಕೆ ಹೋಗುವರು; ಅಲ್ಲೇ ಅವರನ್ನು ಕಾಣುವಿರಿ,’ ಎಂದು ತಿಳಿಸಿರಿ. ನಾನು ನಿಮಗೆ ತಿಳಿಸಬೇಕಾದ ಸಮಾಚಾರ ಇದೇ, ಮರೆಯದಿರಿ,” ಎಂದನು. 
8: ಅದರಂತೆಯೇ ಆ ಮಹಿಳೆಯರು ಭಯಮಿಶ್ರಿತ ಆನಂದದಿಂದ ಸಮಾಧಿಯನ್ನು ಬಿಟ್ಟು ಕೂಡಲೇ ಹೊರಟರು. ಶಿಷ್ಯರಿಗೆ ಈ ಸಮಾಚಾರವನ್ನು ಮುಟ್ಟಿಸಲು ಧಾವಿಸಿದರು.
9: ತಟ್ಟನೆ, ಯೇಸುವೇ ಅವರನ್ನು ಎದುರುಗೊಂಡು, “ನಿಮಗೆ ಶುಭವಾಗಲಿ!” ಎಂದರು. ಆ ಮಹಿಳೆಯರು ಹತ್ತಿರಕ್ಕೆ ಬಂದು, ಅವರ ಪಾದಕ್ಕೆರಗಿ ಪೂಜಿಸಿದರು.
10 : ಆಗ ಯೇಸು ಅವರಿಗೆ, “ಭಯಪಡಬೇಡಿ, ನನ್ನ ಸೋದರರ ಬಳಿಗೆ ಹೋಗಿ ಅವರು ಗಲಿಲೇಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ತಿಳಿಸಿರಿ,” ಎಂದು ಹೇಳಿದರು.
11: ಇತ್ತ ಆ ಮಹಿಳೆಯರು ಹೋಗುತ್ತಿದ್ದಂತೆ, ಅತ್ತ ಕಾವಲುಗಾರರಲ್ಲಿ ಕೆಲವರು ನಗರಕ್ಕೆ ಬಂದು ನಡೆದ ಸಂಗತಿಯನ್ನೆಲ್ಲಾ ಮುಖ್ಯಯಾಜಕರಿಗೆ ವರದಿ ಮಾಡಿದರು.
12: ಇವರು ಪ್ರಮುಖರೊಂದಿಗೆ ಸಭೆಸೇರಿ ಒಂದು ಸಂಚುಹೂಡಿದರು. ಸೈನಿಕರಿಗೆ ಭಾರಿ ಲಂಚಕೊಟ್ಟು,
13: “ಅವನ ಶಿಷ್ಯರು ರಾತ್ರಿ ವೇಳೆಯಲ್ಲಿ ಬಂದು, ನಾವು ನಿದ್ರೆಮಾಡುತ್ತಿದ್ದಾಗ ಅವನನ್ನು ಕದ್ದುಕೊಂಡು ಹೋದರೆಂದು ಜನರಿಗೆ ಹೇಳಿರಿ;
14: ಈ ಸುದ್ಧಿ ರಾಜ್ಯಪಾಲನ ಕಿವಿಗೆ ಬಿದ್ದರೆ, ನಾವು ಅವರನ್ನು ಸಮಾಧಾನ ಪಡಿಸುತ್ತೇವೆ; ನಿಮಗೇನೂ ಆಗದಂತೆ ನೋಡಿಕೊಳ್ಳುತ್ತೇವೆ,” ಎಂದು ಹೇಳಿದರು.
15: ಸೈನಿಕರು ಲಂಚವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟಂತೆಯೇ ಮಾಡಿದರು. ಈ ಕಟ್ಟುಕತೆ ಯೆಹೂದ್ಯರಲ್ಲಿ ಹಬ್ಬಿ ಇಂದಿನವರೆಗೂ ಪ್ರಚಲಿತವಾಗಿದೆ.
16: ಹನ್ನೊಂದು ಮಂದಿ ಶಿಷ್ಯರು ಗಲಿಲೇಯಕ್ಕೆ ಹೋದರು. ಯೇಸು ಸೂಚಿಸಿದ್ದ ಬೆಟ್ಟಕ್ಕೆ ಬಂದರು.
17: ಅಲ್ಲಿ ಯೇಸುಸ್ವಾಮಿಯನ್ನು ಕಂಡು ಅವರನ್ನು ಪೂಜಿಸಿದರು. ಆದರೆ ಕೆಲವರು ಸಂದೇಹಪಟ್ಟರು.
18: ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.
19: ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.
20: ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು.

ಚಿಂತನೆ
ಮನೆಯಲ್ಲಿ ಮಹಿಳೆಯರು ಬೆಳಗ್ಗೆ ಬೇಗನೇ ಎದ್ದು ಕುಟುಂಬದ ಅವಶ್ಯಕವಾದ ಕೆಲಸಗಳನ್ನು ಲಗುಬಗೆಯಿಂದ ಮಾಡುವುದು ಒಂದು ವಾಡಿಕೆ. ಮಹಿಳೆಯರೇ ತುಂಬಾ ಮುತುವರ್ಜಿಯಿಂದ ಸುಸೂತ್ರವಾಗಿ ತಪ್ಪಿಲ್ಲದೇ ತಮ್ಮ ಕೆಲಸಗಳನ್ನು ನಿರ್ವಹಿಸುತ್ತಾರೆ. ಅದರಲ್ಲೂ ತಮ್ಮ ಒಲುಮೆಯ ಯೇಸುಸ್ವಾಮಿ ಪುನರುತ್ಥಾನರಾದ ಸಂದೇಶವನ್ನು ಬೇಗಬೇಗನೇ ಯೇಸುವಿನ ಶಿಷ್ಯರಿಗೆ ತಿಳಿಸಿದರು. ಇವರು ಯೇಸು ಪುನರುತ್ಥಾನರಾಗಿರುವರು, ಸತ್ತವರಿಂದ ಎದ್ದಿಹರು ಎಂಬ ಸುದ್ಧಿಯನ್ನು ಜಗತ್ತಿಗೆ ಪ್ರಪ್ರಥಮವಾಗಿ ಸಾರಿದವರು. ಯೆಹೂದ್ಯ ಸಮಾಜದಲ್ಲಿ ಮಹಿಳೆಯರು ಸಾಮಾಜಿಕ ಶೋಷನೆಗೆ ಒಳಗಾಗಿದ್ದ ವರ್ಗ. ಯೆಹೂದ್ಯರು ಸ್ತ್ರೀರನ್ನು ಅತಿಕೀಳಾಗಿ, ತುಚ್ಚವಾಗಿ ಕಾಣುತ್ತಿದ್ದರು. ಈ ಸಮಾಜದಲ್ಲಿ ಮಹಿಳೆಯರು ಬರೀ ಒಂದು ಭೋಗದ ವಸ್ತುವಾಗಿದ್ದರು. ಅವರಿಗೆ ಯಾವುದೇ ಮಾನ, ಗೌರವ ಅನ್ನುವಂಥದ್ದು ಇರಲಿಲ್ಲ. ನಿಮಗೆ ಶುಭವಾಗಲಿ!" ಎಂದು ನುಡಿದು, ನಮ್ಮ ಸ್ತ್ರೀಯರಿಗೆ ಯೇಸುವೇ ಪ್ರಪ್ರಥಮವಾಗಿ ಮಹಿಳಾಕುಲಕ್ಕೆ ತಕ್ಕ ಗೌರವ ಕೊಡುವ ನಿಜಸಂದೇಶವನ್ನು ಇಡೀ ಜಗತ್ತಿಗೆ ಸಾರಿದರು. ನಿಮಗೆ ಶುಭವಾಗಲಿ ಎನ್ನುವ ಶಬ್ದಗಳಲ್ಲಿ ಹೆಣ್ಣುಕುಲವನ್ನು ಮೆರೆದರು. ಆಮೆನ್.
- ಫಾ ಅಂಬ್ರೋಸ್ ಡಿ'ಸೋಜ ಯೇ.ಸ

No comments:

Post a Comment