ಬಿಳಿ/ಶುಕ್ರ/ಪಾಸ್ಖ
ಹಬ್ಬದ
ಅಷ್ಟಮಿಯ ದಿನ
1ನೇ ವಾಚನ - ಪ್ರೇ.ಕಾ 4: 1-12
ಕೀರ್ತನೆ - 118: 1-2, 4, 22-27
ಶುಭಸಂದೇಶ - ಯೋವಾನ್ನ
21:
1-14
1ನೇ ವಾಚನ - ಪ್ರೇ.ಕಾ 4: 1-12
1 ಪೇತ್ರ ಮತ್ತು ಯೊವಾನ್ನ ಜನರನ್ನು ಉದ್ದೇಶಿಸಿ ಇನ್ನೂ ಮಾತನಾಡುತ್ತಿದ್ದರು. ಆಗ ಯಾಜಕರೂ ಮಹಾದೇವಾಲಯದ ದಳಪತಿಗಳೂ ಸದ್ದುಕಾಯರೂ ಅಲ್ಲಿಗೆ ಬಂದರು.
2 ಯೇಸುವಿನ ಪುನರುತ್ಥಾನದ ಆಧಾರದ ಮೇಲೆ ಮೃತರಾದ ಎಲ್ಲರೂ ಪುನರುತ್ಥಾನ ಹೊಂದುವರು ಎಂದು ಈ ಇಬ್ಬರು ಪ್ರೇಷಿತರು ಬೋಧಿಸುತ್ತಿದ್ದರು.
3 ಇದನ್ನು ಕೇಳಿ ಸಿಟ್ಟುಗೊಂಡಿದ್ದ ಅವರು ಪೇತ್ರ, ಯೊವಾನ್ನರನ್ನು ಬಂಧಿಸಿದರು. ಆಗಲೇ ಹೊತ್ತು ವಿೂರಿದ್ದರಿಂದ ಮಾರನೆಯ ದಿನದವರೆಗೆ ಅವರನ್ನು ಸೆರೆಮನೆಯಲ್ಲಿಟ್ಟರು.
4 : ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.
5 : ಮಾರನೆಯ ದಿನ ಯೆಹೂದ್ಯ ಅಧಿಕಾರಿಗಳೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಜೆರುಸಲೇಮಿನಲ್ಲಿ ಸಭೆ ಸೇರಿದರು.
6 : ಪ್ರಧಾನ ಯಾಜಕ ಅನ್ನಾ ಹಾಗೂ ಕಾಯಫ, ಯೊವಾನ್ನ, ಅಲೆಕ್ಸಾಂಡರ್ ಮತ್ತು ಪ್ರಧಾನ ಯಾಜಕನ ಕುಟುಂಬದವರು ಆ ಸಭೆಯಲ್ಲಿ ಹಾಜರಿದ್ದರು.
7 ಪ್ರೇಷಿತರನ್ನು ಸಭೆಯ ಮುಂದೆ ನಿಲ್ಲಿಸಿ, “ಇದೆಲ್ಲವನ್ನು ನೀವು ಯಾರ ಹೆಸರಿನಲ್ಲಿ ಮತ್ತು ಯಾವ ಅಧಿಕಾರದಿಂದ ಮಾಡಿದಿರಿ?” ಎಂದು ಪ್ರಶ್ನಿಸಿದರು.
8 : ಪೇತ್ರನು ಪವಿತ್ರಾತ್ಮಭರಿತನಾಗಿ ಹೀಗೆಂದು ಉತ್ತರಕೊಟ್ಟನು: “ಜನರ ಅಧಿಕಾರಿಗಳೇ, ಪ್ರಮುಖರೇ,
9 : ನಾವು ಒಬ್ಬ ಕುಂಟನಿಗೆ ಮಾಡಿದ ಸತ್ಕಾರ್ಯದ ಬಗ್ಗೆ, ಅವನು ಸ್ವಸ್ಥನಾದುದು ಹೇಗೆಂದು ನೀವು ನಮ್ಮನ್ನು ಇಂದು ಪ್ರಶ್ನಿಸುತ್ತಿರುವಿರಿ.
10 : ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ: ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ.
11 ನೀವು ಶಿಲುಬೆಗೇರಿಸಿ ಕೊಂದದ್ದು ಈ ಯೇಸುವನ್ನೇ. ದೇವರು ಅವರನ್ನು ಪುನರುತ್ಥಾನಗೊಳಿಸಿದ್ದಾರೆ. ‘ಮನೆಕಟ್ಟುವವರಾದ ನೀವು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು’ ಎಂದು ಬರೆದಿರುವುದು ಇವರನ್ನು ಕುರಿತೇ.
12 ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ.”
ಕೀರ್ತನೆ - 118: 1-2, 4, 22-27
ಸದುತ್ತರ ಪಾಲಿಸಿದ ಪ್ರಭೂ, ನಿನಗೆ ವಂದನೆ
1 : ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ / ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ //
14 : ಪ್ರಭುವೇ ನನಗೆ ಬಲವು, ಧೈರ್ಯವು / ಆತನಿಂದಲೇ ನನಗೆ ಉದ್ಧಾರವು //
15 : ಜಯಘೋಷ, ಹರ್ಷಸುನಾದ ಸಜ್ಜನರ ಬಿಡಾರದಿಂದ / “ಪರಾಕ್ರಮ, ಪ್ರದರ್ಶನ ಪ್ರಭುವಿನ ಬಲಗೈಯಿಂದ //
16 : ವಿಜಯಸಾಧನ ಪ್ರಭುವಿನಾ ಬಲಗೈಯಿಂದ / ಪರಾಕ್ರಮ, ಪ್ರದರ್ಶನವೂ ಅದರಿಂದ” //
17 : ಸಾಯೆನು, ಜೀವದಿಂದಿರುವೆನು ನಾನು / ಪ್ರಭುವಿನ ಕಾರ್ಯಗಳನು ಸಾರುವೆನು //
18 : ಗುರಿಪಡಿಸಿಹನು ಎನ್ನನು ಪ್ರಭು ಕಠಿಣ ಶಿಕ್ಷೆಗೆ / ಆದರೂ ಗುರಿಮಾಡಲಿಲ್ಲ ಎನ್ನನು ಮರಣಕೆ //
19 : ತೆರೆಯಿರಿ ಎನಗೆ ನೀತಿದ್ವಾರಗಳನು / ಒಳನುಗ್ಗಿ ಹೊಗಳುವೆನು ಪ್ರಭುವನು //
20 : ಇದುವೇ ದ್ವಾರ ಪ್ರಭುವಿನ ಮಂದಿರಕೆ / ಇದುವೇ ಪ್ರವೇಶಮಾರ್ಗ ಸಜ್ಜನರಿಗೆ //
21 : ಸದುತ್ತರ ಪಾಲಿಸಿದ ಪ್ರಭೂ, ನಿನಗೆ ವಂದನೆ / ಉದ್ಧಾರ ಮಾಡಿದೆ, ನಿನಗೆ ಕೃತಜ್ಞತಾವಂದನೆ //
ಶುಭಸಂದೇಶ - ಯೋವಾನ್ನ 21: 1-14
1 : ತರುವಾಯ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಮತ್ತೊಮ್ಮೆ ತಿಬೇರಿಯ ಸರೋವರದ ಬಳಿ ಕಾಣಿಸಿಕೊಂಡರು. ಅದು ಹೀಗೆ ನಡೆಯಿತು:
2 : ಸಿಮೋನ ಪೇತ್ರನು, ದಿದುಮನೆಂಬ ತೋಮನು, ಗಲಿಲೇಯದ ಕಾನಾ ಊರಿನ ನತಾನಯೇಲನು, ಜೆಬೆದಾಯನ ಪುತ್ರರು ಮತ್ತು ಯೇಸುವಿನ ಇನ್ನಿಬ್ಬರು ಶಿಷ್ಯರು ಒಟ್ಟಿಗೆ ಸೇರಿದ್ದರು.
3 : ಆಗ ಸಿಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ,” ಎಂದನು. ಮಿಕ್ಕವರು, “ನಾವೂ ನಿನ್ನೊಡನೆ ಬರುತ್ತೇವೆ,” ಎಂದರು. ಅವರೆಲ್ಲರೂ ಹೊರಟು ದೋಣಿಯನ್ನು ಹತ್ತಿದರು. ಆ ರಾತ್ರಿಯೆಲ್ಲಾ ಅವರಿಗೆ ಒಂದು ವಿೂನೂ ಸಿಗಲಿಲ್ಲ.
4 : ಬೆಳಗಾಗುವಷ್ಟರಲ್ಲಿ ಯೇಸು ತೀರದಲ್ಲಿ ನಿಂತಿದ್ದರು. ಆದರೆ ಅವರು ಯೇಸು ಎಂದು ಶಿಷ್ಯರಿಗೆ ಹೊಳೆಯಲಿಲ್ಲ.
5 : ಯೇಸು ಅವರಿಗೆ, “ಮಕ್ಕಳೇ, ಊಟಕ್ಕೆ ಏನಾದರೂ ಸಿಕ್ಕಿತೇ?” ಎಂದು ಕೇಳಿದರು. “ಏನೂ ಇಲ್ಲ,” ಎಂದರು ಅವರು.
6 : “ದೋಣಿಯ ಬಲಗಡೆಗೆ ಬಲೆ ಬೀಸಿರಿ; ವಿೂನುಗಳು ಸಿಗುತ್ತವೆ,” ಎಂದು ಯೇಸು ಹೇಳಲು ಅವರು ಹಾಗೆಯೇ ಮಾಡಿದರು. ಆಗ ವಿೂನುಗಳು ರಾಶಿರಾಶಿಯಾಗಿ ಸಿಕ್ಕಿದವು. ಬಲೆಯನ್ನು ಎಳೆಯಲೂ ಆಗದೆ ಹೋಯಿತು.
7 : ಆಗ ಯೇಸುವಿನ ಆಪ್ತಶಿಷ್ಯನು ಪೇತ್ರನಿಗೆ, “ಅವರೇ ಪ್ರಭು” ಎಂದನು. ಪ್ರಭುವೆಂದು ಕೇಳಿದ್ದೇ ತಡ, ಬರೀ ಮೈಯಲ್ಲಿದ್ದ ಪೇತ್ರನು ಬಟ್ಟೆಯನ್ನು ಹಾಕಿಕೊಂಡು ನೀರಿಗೆ ಧುಮುಕಿದನು.
8 : ಮಿಕ್ಕ ಶಿಷ್ಯರು ವಿೂನು ತುಂಬಿದ್ದ ಬಲೆಯನ್ನು ಎಳೆಯುತ್ತಾ ಸುಮಾರು ಮುನ್ನೂರು ಅಡಿ ದೂರದಲ್ಲಿದ್ದ ದಡಕ್ಕೆ ದೋಣಿಯಲ್ಲೇ ಬಂದರು.
9 : ಅವರು ದಡವನ್ನು ಸೇರಿದಾಗ ಅಲ್ಲಿ ಇದ್ದಲಿನ ಬೆಂಕಿ ಮಾಡಲಾಗಿತ್ತು. ಕೆಂಡದ ಮೇಲೆ ವಿೂನುಗಳಿದ್ದವು. ರೊಟ್ಟಿಯೂ ಅಲ್ಲಿತ್ತು.
10 : ಯೇಸು ಅವರಿಗೆ, “ನೀವು ಈಗ ತಾನೇ ಹಿಡಿದ ವಿೂನುಗಳಲ್ಲಿ ಕೆಲವನ್ನು ತನ್ನಿ,” ಎಂದು ಹೇಳಿದರು.
11 : ಸಿಮೋನ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳೆದು ತಂದನು. ಬಲೆಯ ತುಂಬ ದೊಡ್ಡ ವಿೂನುಗಳು - ಒಟ್ಟಿಗೆ ನೂರೈವತ್ತಮೂರು ಇದ್ದವು. ಅಷ್ಟು ವಿೂನುಗಳಿದ್ದರೂ ಬಲೆಯು ಹರಿದಿರಲಿಲ್ಲ.
12 : ಯೇಸು ಅವರಿಗೆ, “ಬಂದು ಊಟಮಾಡಿ,” ಎಂದು ಅವರನ್ನು ಕರೆದರು. ಅವರು ಪ್ರಭುವೆಂದು ಅರಿತಿದ್ದ ಕಾರಣ ಶಿಷ್ಯರಲ್ಲಿ ಒಬ್ಬನಿಗಾದರೂ, “ನೀವು ಯಾರು?” ಎಂದು ಕೇಳುವಷ್ಟು ಧೈರ್ಯ ಇರಲಿಲ್ಲ.
13 : ಯೇಸು ಹತ್ತಿರಕ್ಕೆ ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟರು; ಹಾಗೆಯೇ ವಿೂನನ್ನೂ ಕೊಟ್ಟರು.
14
: ಯೇಸು ಸತ್ತು ಜೀವಂತರಾಗಿ ಎದ್ದ ಬಳಿಕ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.
ಚಿಂತನೆ
ಯೇಸುಸ್ವಾಮಿ ಪುನರುತ್ಥಾನರಾದ ನಂತರ ಕೆಲವು ಸಲ ಕಾಣಿಸಿಕೊಂಡು ಮತ್ತೆ ಕಾಣದೇ ಇದ್ದಾಗ, ಪ್ರೇಷಿತರು ನಿಧಾನವಾಗಿ ಮತ್ತೆತಮ್ಮ ಸ್ವಕಸುಬಾದ ಮೀನು ಹಿಡಿಯಲಿಕ್ಕೆ ಹೋಗುತ್ತಾರೆ. ಇವರಿಗೆ ತುಂಬಾ ಬೇಸರವಾಗಿತ್ತು. ಜೀವದಲ್ಲಿ ಜುಗುಪ್ಸೆಯುಂಟಾಗಿತ್ತು. ಎಲ್ಲಿ ನೋಡಿದರಲ್ಲಿ ನಿರಾಶೆ ರಾರಾಜಿಸುತ್ತಿತ್ತು. ಮೀನು ಹಿಡಿಯಲಿಕ್ಕೆ ಹೋದರೆ ಒಂದೂ ಮೀನು ಬಲೆಗೆ ಬೀಳುವದಿಲ್ಲ. ಎಲ್ಲಾ ಕಳೆದು ಹೋಯಿತು, ಯೇಸುಸ್ವಾಮಿಯೇ ಕೈ ಬಿಟ್ಟಿದ್ದಾರೆ.
ಇಂಥಹ ಸೂಕ್ಷ್ಮ ಗಳಿಗೆಯಲ್ಲಿ ಆಶಾಕಿರಣವಾಗಿ ಸಮುದ್ರ ತಿರದ ಮೇಲೆ ಮತ್ತೆ ಯೇಸುಸ್ವಾಮಿ ಕಾಣಿಸಿಕೊಳ್ಳುತ್ತಾರೆ, ಅಷ್ಠೇ ಅಲ್ಲ ನಿಮಗೆ ಮೀನು ಸಿಗಲಿಲ್ಲವಾದರೆ, ದೋಣಿಯ ಬಲಗಡೆ ಬಲೆ ಬೀಸಿರಿ; ಮೀನುಗಳು ಸಿಗುತ್ತವೆ ಇಡೀ ರಾತ್ರಿ ಬಲೆ ಬೀಸಿದರೂ ಏನು ಸಿಗಲಿಲ್ಲ, ಆದರೆ, ಈಗ, ಪ್ರಭುವಿನ ಮಾತಿಗೆ ಬೆಲೆಕೊಟ್ಟು ಬಲೆಬೀಸಿದಾಗ, ಬಲೆ ತುಂಬಾ ಮೀನು ಸಿಗುತ್ತವೆ. ಯೇಸುವನ್ನು ಕಂಡವರಲ್ಲಿ ಭರವಸೆ ಮತ್ತು ಆಶಾವಾದದ ಅಂಕುರ ಮೆಲ್ಲನೆ ಚಿಗುರಲಾರಂಭಿಸಿತು. ಎಲ್ಲಿಲ್ಲದ ಧೈರ್ಯ ಹೃದಯದಲ್ಲಿ ತುಂಬಲಾರಂಭಿಸಿತು. ಮನದಲ್ಲಿ ಜೀವಕಳೆ ತುಂಬಿತು. ಹೀಗೆಯೇ, ಯಾರ ಸಂಗಡ ಪ್ರಭುಕ್ರಿಸ್ತರು ಇರುವರೋ, ಅವರಿಗೆ ಈ ಪರಿ ಭಾಸ ಆಗುವುದು. ಆಮೆನ್.
ಫಾ ಅಂಬ್ರೋಸ್ ಡಿ'ಸೋಜಾ ಯೇ.ಸ
No comments:
Post a Comment