Tuesday, 27 August 2019

ಸಾಧಾರಣ ಕಾಲದ ಇಪ್ಪತ್ತೊಂದನೇ ವಾರ ಗುರುವಾರ

ಸಾಧಾರಣ ಕಾಲದ ಇಪ್ಪತ್ತೊಂದನೇ ವಾರ ಗುರುವಾರ 

29/ಕೆಂಪು/ಗುರು/ಸಂತ ಸ್ನಾನಿಕ ಯೊವಾನ್ನರ ಶಿರಚ್ಛೇದನ (ಸ್ಮರಣೆ)
1ನೇ ವಾಚನ - ಯೆರೆ: 1:17-19
ಕೀರ್ತನೆ  -  71:  1-6,  15-17
ಶುಭಸಂದೇಶ- ಮಾರ್ಕ 6: 17-29

1ನೇ ವಾಚನ - ಯೆರೆ: 1:17-19
ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು. ನಾನು ಹೇಳುವುದನ್ನು ಗಮನದಿಂದ ಕೇಳು – ಈ ದಿನ ನಿನ್ನನ್ನು ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಜನ ಸಾಮಾನ್ಯರು, ಹೀಗೆ ನಾಡಿನವರೆಲ್ಲರನ್ನು ಎದುರಿಸತಕ್ಕವನನ್ನಾಗಿ ಮಾಡಿದ್ದೇನೆ; ಕೋಟೆ ಕೊತ್ತಲಗಳಿಂದ ಸುಸಜ್ಜಿತ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ನಿನ್ನನ್ನು ಸ್ಥಾಪಿಸಿದ್ದೇನೆ. ನಿನಗೆ ವಿರುದ್ಧವಾಗಿ ಅವರು ಯುದ್ಧಮಾಡುವರು; ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ನುಡಿ”.

ಕೀರ್ತನೆ  -  71:  1-6,  15-17
1 : ಆಶ್ರಯಕೋರಿ ಹೇ ಪ್ರಭು, ನಾ ಬಂದಿರುವೆ / ಆಶಾಭಂಗವಾಗದಿರಲೆಂದು ನಾ ಬೇಡುವೆ //
2 : ಸತ್ಯಸ್ವರೂಪನೆ, ನನ್ನ ಬಿಡಿಸಿ ರಕ್ಷಿಸಯ್ಯಾ / ನನಗೆ ಕಿವಿಗೊಟ್ಟು ಪ್ರಭು ನನ್ನನುದ್ಧರಿಸಯ್ಯಾ //
3 : ನೀನಾಗಿರು ನನಗಾಶ್ರಯದುರ್ಗ, ಕೋಟೆಕೊತ್ತಲು / ನೀನೇ ನನ್ನ ದುರ್ಗ, ಕೋಟೆ ನನ್ನನು ರಕ್ಷಿಸಲು //
4 : ದುರುಳರ ಕೈಯಿಂದೆನ್ನನು ದೇವಾ, ಬಿಡಿಸಯ್ಯಾ / ಕ್ರೂರ ಕೇಡಿಗರ ವಂಶದಿಂದೆನ್ನನು ತಪ್ಪಿಸಯ್ಯಾ //
5 : ಸ್ವಾಮಿ ದೇವಾ, ನೀನೇ ನನ್ನ ಭರವಸೆ / ಬಾಲ್ಯದಿಂದಲೂ ನೀನೇ ನನ್ನ ನಂಬಿಕೆ //
6 : ಹುಟ್ಟಿನಿಂದಲೆ ನಾ ನಿನಗಂಟಿ ಕೊಂಡಿರುವೆನಯ್ಯಾ / ಗರ್ಭದಿಂದಲೆ ನೀ ಎನ್ನನು ಕರೆದುತಂದೆಯಯ್ಯಾ / ನಿರಂತರವೂ ನಿನ್ನನು ಕೊಂಡಾಡುತ್ತಿರುವೆನಯ್ಯಾ //
15 : ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯ ನೀತಿಯನು / ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು //
16 : ಸ್ವಾಮಿ ದೇವಾ, ಸ್ಮರಿಸುವೆನು ನಿನ್ನ ಮಹತ್ಕಾರ್ಯಗಳನೆ / ಪ್ರಕಟಪಡಿಸುವೆನು ನಿನ್ನೊಬ್ಬನ ನ್ಯಾಯನೀತಿಯನೆ //

17 : ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ?/ ನಿನ್ನ ಅದ್ಭುತ ಕಾರ್ಯಗಳನೆಂದಿಗು ನಾ ಘೋಷಿಸುತ್ತಿರುವೆ //

ಶುಭಸಂದೇಶ- ಮಾರ್ಕ 6: 17-29
ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತ ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು. ಈ ಕಾರಣ ಯೊವಾನ್ನನು, “ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಪದೇಪದೇ ಅವನನ್ನು ಎಚ್ಚರಿಸುತ್ತಿದ್ದನು. ಇದರ ನಿಮಿತ್ತ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ. ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲ ಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನ್ನು ಕಿವಿಗೊಟ್ಟು ಕೇಳುತ್ತಿದ್ದನು. ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಹುಟ್ಟುಹಬ್ಬದ ದಿನಾಚರಣೆಯಂದು, ಆಸ್ಥಾನಿಕರಿಗೂ ಸೇನಾಧಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣಕೂಟವನ್ನು ಏರ್ಪಡಿಸಿದನು. ಆ ಸಮಾರಂಭದಲ್ಲಿ ಹೆರೋದಿಯಳ ಮಗಳು ಔತಣಶಾಲೆಗೆ ಬಂದು ನರ್ತನ ಮಾಡಿದಳು. ಹೆರೋದನೂ ಅವನ ಜೊತೆಯಲ್ಲಿ ಭೋಜನಕ್ಕೆ ಕುಳಿತಿದ್ದ ಅತಿಥಿಗಳೂ ಅದನ್ನು ಬಹಳವಾಗಿ ಮೆಚ್ಚಿಕೊಂಡರು. ಆಗ ಅರಸ ಹೆರೋದನು ಅವಳಿಗೆ, “ನಿನಗೆ ಏನು ಬೇಕಾದರೂ ಕೇಳು, ಕೊಡುತ್ತೇನೆ” ಎಂದನು. “ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು. ಅವಳು ತನ್ನ ತಾಯಿಯ ಬಳಿಗೆ ಹೋಗಿ, “ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?” ಎಂದು ವಿಚಾರಿಸಿದಳು. “ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು,” ಎಂದು ಆಕೆ ಮಗಳನ್ನು ಪ್ರೇರೇಪಿಸಿದಳು. ಕೂಡಲೆ ಅವಳು ಅರಸನ ಬಳಿಗೆ ಧಾವಿಸಿ, “ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೇ ಒಂದು ತಟ್ಟೆಯಲ್ಲಿ ತರಿಸಿಕೊಡಿ; ಇದೇ ನನ್ನ ಬೇಡಿಕೆ,” ಎಂದು ಕೇಳಿಕೊಂಡಳು. ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. ಆದುದರಿಂದ ಅವನು ಒಬ್ಬ ಪಹರೆಯವನನ್ನು ಕರೆದು, ಕೂಡಲೇ ಯೊವಾನ್ನನ ತಲೆಯನ್ನು ತರಬೇಕೆಂದು ಅವನಿಗೆ ಆಜ್ಞೆಮಾಡಿ ಕಳುಹಿಸಿದನು. ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆ ತಂದುಕೊಟ್ಟನು. ಅವಳು ಅದನ್ನು ತನ್ನ ತಾಯಿಗೆ ಕೊಟ್ಟಳು. ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಮಾಡಿದರು.
ಚಿಂತನೆ
ಸಣ್ಣತನ ಎಲ್ಲಿ ಇದೆಯೋ ಅಲ್ಲಿ ದ್ವೇಷ ಇರುತ್ತದೆ. ಸಣ್ಣ ಮನಸ್ಸು ಪಡೆದವರು, ಸಂಕುಚಿತ ಮನಸ್ಸು  ಹೊಂದಿರುವವರು ಪಾಪ ಕಾರ್ಯ ಮಾಡಲು ಮುಂದಾಗುತ್ತಾರೆ. ದ್ವೇಷವು ಸಣ್ಣ ಮನಸ್ಸು ಮತ್ತು ಪಾಪ ಪ್ರಜ್ಞೆ ಕಾಡುವ ಮನಸ್ಸಿನ ದೊಡ್ಡ ಪಾಪವಾಗಿದೆ. ತಮ್ಮ ದ್ವೇಷವನ್ನು ಸಮರ್ಥಿಸಿಕೊಳ್ಳಲು ಅವರು ತಮ್ಮ ಸಣ್ಣತನವನ್ನು ಉಪಯೋಗಿಸಿಕೊಳ್ಳುತ್ತಾರೆ.
ಹೆರೋದಿಯಳ ದ್ವೇಷಕ್ಕೆ, ಪಾಪ ಪ್ರಜ್ಞೆಗೆ ಸ್ನಾನಿಕ ಯೊವಾನ್ನರು ಬಲಿಯಾಗುತ್ತಾರೆ. ದ್ವೇಷದ ವಿನಾ ಸ್ನಾನಿಕ ಯೊವಾನ್ನನಲ್ಲಿದ್ದ ಧೈರ್ಯ, ನೈತಿಕತೆ, ಪ್ರಾಮಾಣಿಕತೆ ಅವಳಿಗೆ ಕಾಣದೆ ಹೋಯಿತು. ಮನುಷ್ಯನು ದೈವತ್ವಕ್ಕೆ ಏರದಿದ್ದರೂ ರಾಕ್ಷಸತನಕ್ಕೆ ಇಳಿಯಬಾರದು. ದುಷ್ಟತೆಯ ವಿರುದ್ಧವಾಗಿ ಧೈರ್ಯದಿಂದ ಮಾತಾಡುವ, ಸತ್ಯದ ಪರವಾಗಿ ನಿಷ್ಠುರ ನುಡಿಯುವ, ಅಧಿಕಾರಿಗಳ ತಪ್ಪನ್ನು ಖಂಡಿಸುವವನ ಅಂತ್ಯ ತುಂಬಾ ಕ್ರೂರವಾಗಿರುತ್ತದೆ ಎಂಬುದು ಇಂದಿನ ಶುಭಸಂದೇಶ ನೀಡುವ ಸಂದೇಶ.

No comments:

Post a Comment