Wednesday, 11 September 2019

ಸಾಧಾರಣ ಕಾಲದ ಇಪ್ಪತ್ತಾರನೇ ವಾರ ಗುರುವಾರ

ಸಾಧಾರಣ ಕಾಲದ ಇಪ್ಪತ್ತಾರನೇ ವಾರ ಗುರುವಾರ

13/ಹಸಿರು/ಗುರು
1ನೇ ವಾಚನ - ನೆಹೆ 8: 1-12
ಕೀರ್ತನೆ - 19: 7-1೦
ಶುಭಸಂದೇಶ - ಲೂಕ 1೦: 1-12


1ನೇ ವಾಚನ - ನೆಹೆ 8: 1-12
ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ಒಟ್ಟಿಗೆ ಸೇರಿದರು. ಸರ್ವೇಶ್ವರ ಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು. ಯಾಜಕ ಎಜ್ರನು, ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀ ಪುರುಷರು ನೆರೆದಿದ್ದ ಸಮೂಹದವರ ಮುಂದೆ, ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ, ಆ ಧರ್ಮಶಾಸ್ತ್ರವನ್ನು ತಂದು ಬೆಳಗಿನಿಂದ ಮಧ್ಯಾಹ್ನದವರೆಗೂ ಓದಿದನು. ಆ ನೀರು ಬಾಗಿಲಿನ ಮುಂದಣ ಬಯಲಿನಲ್ಲಿ ಕೂಡಿ ಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಲು ಶಕ್ತರಾದವರೆಲ್ಲರೂ ಧರ್ಮಶಾಸ್ತ್ರ ಪಾರಾಯಣವನ್ನು ಆಲಿಸುತ್ತಿದ್ದರು. ಧರ್ಮೋಪದೇಶಕ ಎಜ್ರನು ಪಾರಾಯಣಕ್ಕಾಗಿ ಮಾಡಲಾಗಿದ್ದ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರು ಇದ್ದರು. ಎಡಗಡೆಯಲ್ಲಿ ಪೆದಾಯ, ವಿೂಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರು ನಿಂತಿದ್ದರು. ಜನ ಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷಮದಲ್ಲಿ ಗ್ರಂಥವನ್ನು ತೆರೆದ ಕೂಡಲೆ, ಎಲ್ಲರು ಎದ್ದುನಿಂತರು. ಎಜ್ರನು ಪರಾತ್ಪರ ದೇವರಾದ ಸರ್ವೇಶ್ವರನನ್ನು ಸ್ತುತಿಸಿದಾಗ ಸರ್ವಜನರೂ ತಮ್ಮ ಕೈಗಳನ್ನೆತ್ತಿ ‘ಆಮೆನ್, ಆಮೆನ್’ ಎಂದು ಹೇಳಿ ನೆಲದ ಮಟ್ಟಿಗೂ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದರು. ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮಶಾಸ್ತ್ರವನ್ನು ಜನರು ಗ್ರಹಿಸುವಂತೆ ಮಾಡಿದರು. ಜನರು ಎದ್ದುನಿಂತನಂತರ ಅವರು ದೇವರ ಧರ್ಮಶಾಸ್ತ್ರವನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದರು. ಜನರು ಚೆನ್ನಾಗಿ ಗ್ರಹಿಸಿಕೊಂಡರು. ಜನರೆಲ್ಲರು ಧರ್ಮೋಪದೇಶದ ವಾಕ್ಯಗಳನ್ನು ಕೇಳುತ್ತಾ ಕಣ್ಣೀರಿಡುತ್ತಿದ್ದರು. ರಾಜ್ಯಪಾಲ ನೆಹೆವಿೂಯನು, ಧರ್ಮೋಪದೇಶ ಮಾಡುವ ಯಾಜಕ ಎಜ್ರನು ಹಾಗು ಜನರನ್ನು ಸಂಬೋಧಿಸುತ್ತಿದ್ದ ಲೇವಿಯರು ಜನರಿಗೆ, “ಈ ದಿನ ನಿಮ್ಮ ದೇವರಾದ ಸರ್ವೇಶ್ವರನಿಗೆ ಪರಿಶುದ್ಧ ದಿನ! ಆದುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿ,” ಎಂದು ಹೇಳಿದರು. ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು. ಲೇವಿಯರು ಕೂಡ, “ಸುಮ್ಮನಿರಿ, ಇದು ದೇವರ ದಿವಸ; ದುಃಖಿಸಬೇಡಿ,” ಎಂದು ಹೇಳಿ ಜನರನ್ನು ಸಂತೈಸಿದರು. ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗಮನಿಸಿ, ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ಏನೂ ಇಲ್ಲದವರಿಗೆ ಪಾಲುಗಳನ್ನು ಕಳುಹಿಸಿ, ಬಹಳವಾಗಿ ಸಂತೋಷಪಟ್ಟರು.

ಕೀರ್ತನೆ - 19: 7-1೦
7 : ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ / ನಂಬಲರ್ಹ; ಪ್ರಭುವಿನ ಶಾಸನ ಮುಗ್ಧರಿಗದು ಸುಜ್ಞಾನ //
8 : ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ / ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ //
9 : ಪ್ರಭುವಿನ ಭೀತಿ ಪವಿತ್ರ; ಅದೆಂದಿಗೂ ಶಾಶ್ವತ / ಪ್ರಭುವಿನ ತೀರ್ಪು ಯಥಾರ್ಥ; ಪರಿಪೂರ್ಣ ನ್ಯಾಯಯುತ //
10 : ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ / ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ //
11 : ಜಾಗೃತಗೊಳ್ಳುವನು ನಿನ್ನ ದಾಸನು ಅವುಗಳಿಂದ / ಸಂಭಾವಿತನಾಗುವನು ಅವುಗಳ ಪಾಲನೆಯಿಂದ //

ಶುಭಸಂದೇಶ - ಲೂಕ 1೦: 1-12
ಇದಾದ ಮೇಲೆ, ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು. ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ. ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ. ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ, ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು. ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು. “ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ. ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ. ಆದರೆ ನೀವು ಹೋಗುವ ಊರಿನ ಜನರು ನಿಮ್ಮನ್ನು ಸ್ವಾಗತಿಸದೆ ಹೋದರೆ, ರಸ್ತೆಗಳಿಗೆ ಹೋಗಿ, ‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮಗೆ ವಿರುದ್ಧವಾಗಿ ಒದರಿಬಿಡುತ್ತೇವೆ. ಆದರೂ ದೇವರ ಸಾಮ್ರಾಜ್ಯ ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ,’ ಎಂದು ತಿಳಿಸಿರಿ. ತೀರ್ಪಿನ ದಿನ ಈ ಊರಿನ ಗತಿ ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದೆಂದು ನಾನು ನಿಮಗೆ ಹೇಳುತ್ತೇನೆ.



No comments:

Post a Comment