Sunday, 26 April 2020

ಪಾಸ್ಕಕಾಲದ ಏಳನೆಯ ಗುರುವಾರ


 ಮೇ 28, 2020 ಗುರುವಾರ                                                  [ಬಿಳಿ]
ಸಂತ ಸಿರಿಲ್ (ಐಚ್ಛಿಕ ಸ್ಮರಣೆ)
ಮೊದಲ ವಾಚನ: ಪ್ರೇಷಿತರ ಕಾರ್ಯಕಲಾಪಗಳು 22.30; 23.6-11
ಕೀರ್ತನೆ 16: 1-2, 5, 7-11 ಶ್ಲೋಕ.1
ನೀಡು ದೇವಾ ರಕ್ಷಣೆಯನು, ನಾ ನಿನಗೆ ಶರಣಾಗತನು
[ಅಥವಾ] ಅಲ್ಲೆಲೂಯ, ಅಲ್ಲೆಲೂಯ, ಅಲ್ಲೆಲೂಯ
ಶುಭಸಂದೇಶ: ಯೊವಾನ್ನ 17.20-26

ಮೊದಲ ವಾಚನ: ಪ್ರೇಷಿತರ ಕಾರ್ಯಕಲಾಪಗಳು 22.30; 23.6-11
30 : ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಸಭೆಯ ಮುಂದೆ ನಿಲ್ಲಿಸಿದನು.
6 : ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು.
7 : ಅವನು ಹೀಗೆ ಹೇಳಿದಾಕ್ಷಣವೇ, ಫರಿಸಾಯರ ಮತ್ತು ಸದ್ದುಕಾಯರ ನಡುವೆ ವಾಗ್ವಾದ ಉಂಟಾಯಿತು. ಸಭೆಯಲ್ಲಿ ಭಿನ್ನಭೇದವುಂಟಾಯಿತು.
8 : ಏಕೆಂದರೆ, ಸದ್ದುಕಾಯರು ಪುನರುತ್ಥಾನವಾಗಲಿ, ದೇವದೂತರಾಗಲಿ, ದೇಹರಹಿತ ಆತ್ಮವಾಗಲಿ ಇದೆಯೆಂದು ಒಪ್ಪುವುದಿಲ್ಲ. ಆದರೆ ಫರಿಸಾಯರು ಇವೆಲ್ಲಾ ಇವೆಯೆಂದು ನಂಬುತ್ತಾರೆ.
9 : ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು.
10 : ವಾಗ್ವಾದ ವಿಕೋಪಕ್ಕೆ ಹೋದುದರಿಂದ ಪೌಲನನ್ನು ಅವರು ಖಂಡತುಂಡಾಗಿಸಬಹುದೆಂದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯದಿಂದ ಎತ್ತಿಕೊಂಡು ಕೋಟೆಗೆ ತರುವಂತೆ ಆಜ್ಞಾಪಿಸಿದನು.
11 : ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.


ಕೀರ್ತನೆ 16: 1-2, 5, 7-11 ಶ್ಲೋಕ.1
ನೀಡು ದೇವಾ ರಕ್ಷಣೆಯನು, ನಾ ನಿನಗೆ ಶರಣಾಗತನು

1 : ನೀಡು ದೇವಾ ರಕ್ಷಣೆಯನು / ನಾ ನಿನಗೆ ಶರಣಾಗತನು //
2 : “ನೀನೇ ನನ್ನೊಡೆಯನೆಂದು ನಾ ನುಡಿದೆ / ನಿನ್ನ ಹೊರತು ನನಗಿಲ್ಲ ಒಳಿತುಎಂದೆ /
3 : ಸಂತರು ನಾಡಿಗೆ ತಿಲಕವು / ಅವರಲ್ಲಿದೆ ಎನಗೆ ಒಲವು //
4 : ಅನ್ಯದೇವರನ್ನು ಬಯಸುವವರನ್ನು ಕಾದಿದೆ ಕಠಿಣ ಕಷ್ಟ / ಅವರಂತೆ ರಕ್ತಪಾನತರ್ಪಣೆ ಮಾಡಲೆನಗಿಲ್ಲ ಇಷ್ಟ / ದೇವರುಗಳ ನಾಮೋಚ್ಚಾರಣೆ ನನ್ನ ತುಟಿಗೆ ಅನಿಷ್ಟ //
5 : ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ / ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ //
6 : ನನ್ನ ಪಾಲಿಗೆ ಬಂದುದು ರಮಣೀಯವಾದುದು / ನನಗದೆ ಪರಮಾನಂದ ದಾಯಕವಾದುದು //
7 : ಪ್ರಭುವಿಗೆನ್ನ ಧನ್ಯವಾದ - ಆತನೇ ನನಗೆ ಮಾರ್ಗದರ್ಶಕ / ಅಂಧಕಾರದೊಳೂ ನನ್ನ ಮನಸ್ಸಾಕ್ಷಿಯೆ ನನಗೆ ಬೋಧಕ //
8 : ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ / ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ? //
9 : ಇದು ಕಾರಣ ಹರ್ಷದಿಂದಿದೆ ಎನ್ನಯ ಹೃದಯ / ಆನಂದಗೊಂಡಿದೆ ಮನ, ಸುರಕ್ಷಿತವಿದೆ ಕಾಯ //
10 : ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ / ಬಿಟ್ಟುಕೊಡುವುದಿಲ್ಲ ನಿನ್ನ ಭಕ್ತನನು ಪಾತಾಳಕೆ //
11 : ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು / ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು / ನಿನ್ನ ಬಲಗೈ ನೀಡುವುದು ನಿತ್ಯ ಭಾಗ್ಯವನು //

ಶುಭಸಂದೇಶ: ಯೊವಾನ್ನ 17.20-26
19 : ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.
20 : “ಇವರಿಗಾಗಿ ಮಾತ್ರವಲ್ಲ, ಇವರ ಮಾತನ್ನು ಕೇಳಿ ನನ್ನಲ್ಲಿ ವಿಶ್ವಾಸವಿಡುವವರಿಗಾಗಿಯೂ ಪ್ರಾರ್ಥಿಸುತ್ತೇನೆ.
21 : ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.
22 : ನಾವು ಒಂದಾಗಿರುವಂತೆ ಇವರೂ ಒಂದಾಗಿರಲೆಂದು ನೀವು ನನಗಿತ್ತ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
23 : ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.
24 : ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.
25 : ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.
26 : ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ; ಇನ್ನೂ ತಿಳಿಯಪಡಿಸುತ್ತೇನೆ. ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಅವರಲ್ಲಿ ಇರುವಂತಾಗುವುದು,” ಎಂದು ಹೇಳಿದರು.
-------------

ಧರ್ಮ ಸಭೆಯೆಂದರೆ ಅದರ ಸದಸ್ಯರು ನಾವು ಭಕ್ತವಿಶ್ವಾಸಿಗಳೇ ಧಮಸಭೆಯ ಅಂಗಾಂಗಗಳು. ಕ್ರಿಸ್ತ ಸಮಸ್ತ ಜನತೆಗಾಗಿ ಪ್ರಾರ್ಥಿಸುತ್ತಾರೆ. ಅಂಗಾಂಗಳು ಸದಾ ಒಂದಾಗಿರಬೇಕು. ಶರೀರ ಒಂದೇ ಆದರೆ ಅದರ ಅಂಗಗಳು ಬೇರೆ ಬೇರೆ. ಆದರೂ ಶರೀರವೆಂದ ಮೇಲೆ ಎಲ್ಲವೂ ಒಂದಾಗಿರಬೇಕಲ್ಲವೆ. ನಮ್ಮ ನಮ್ಮಲ್ಲಿನ ಒಡಕು, ಭಿನ್ನಭೇದ ತರವಲ್ಲ.
-------------------------------
© 'ದನಿಮಾಧ್ಯಮ ಮನೆ

ದನಿ ಮಾಧ್ಯಮ ಮನೆಯ 'ದನಿ' ಇ-ಮಾಸಿಕಕ್ಕೆ ಬೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ

No comments:

Post a Comment