Sunday, 26 April 2020

ಪಾಸ್ಕಕಾಲದ ಏಳನೆಯ ಬುಧವಾರ

ಮೇ 27, 2020 ಬುಧವಾರ                                                   [ಬಿಳಿ]
ಕ್ಯಾಂಟರ್ಬರಿಯ ಸಂತ ಅಗುಸ್ತೀನ್ [ಧರ್ಮಾಧ್ಯಕ್ಷ] (ಐಚ್ಛಿಕ ಸ್ಮರಣೆ)
ಮೊದಲ ವಾಚನ: ಪ್ರೇಷಿತರ ಕಾರ್ಯಕಲಾಪಗಳು 20.28-38
ಕೀರ್ತನೆ 68:28-29, 32-33, 34-35 ಶ್ಲೋಕ.32
ಭೂರಾಜ್ಯಗಳೇ, ಸ್ತುತಿಸಿರಿ ದೇವರನು!
[ಅಥವಾ] ಅಲ್ಲೆಲೂಯ, ಅಲ್ಲೆಲೂಯ, ಅಲ್ಲೆಲೂಯ
ಶುಭಸಂದೇಶ: ಯೊವಾನ್ನ 17.11-19
ಮೊದಲ ವಾಚನ: ಪ್ರೇಷಿತರ ಕಾರ್ಯಕಲಾಪಗಳು 20.28-38
28 : ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.
29 : ನಾನು ಹೋದ ಬಳಿಕ ಕ್ರೂರವಾದ ತೋಳಗಳು ನಿಮ್ಮ ಮಧ್ಯೆ ನುಗ್ಗುವುವು ಎಂದು ನಾನು ಬಲ್ಲೆ. ಅವು ಮಂದೆಗೆ ಹಾನಿ ಮಾಡದೆ ಬಿಡವು.
30 : ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಭಕ್ತವಿಶ್ವಾಸಿಗಳನ್ನು ತಮ್ಮ ಕಡೆ ಸೆಳೆದುಕೊಳ್ಳಲು ಅಸತ್ಯವಾದವುಗಳನ್ನು ಹೇಳುವರು.
31 : ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.
32 : “ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.
33 : ನಾನು ಯಾರ ಬೆಳ್ಳಿ ಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ.
34 : ನನ್ನ ಹಾಗೂ ನನ್ನ ಸಂಗಡಿಗರ ಅವಶ್ಯಕತೆಗಳನ್ನು ನೀಗಿಸಲು ಕೈಗಳೇ ದುಡಿದಿವೆಯೆಂಬುದು ನಿಮ್ಮೆಲ್ಲರಿಗೂ ತಿಳಿದಿದೆ.
35 : ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದುಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”
36 : ಇಷ್ಟು ಹೇಳಿದ ಮೇಲೆ ಪೌಲನು ಅವರೆಲ್ಲರ ಸಂಗಡ ಮೊಣಕಾಲೂರಿ ಪ್ರಾರ್ಥನೆ ಮಾಡಿದನು.
37 : ಅನಂತರ ಅವರು ಅವನನ್ನು ತಬ್ಬಿಕೊಂಡು ಮುದ್ದಿಟ್ಟು ಬೀಳ್ಕೊಟ್ಟರು. ಅವರ ಕಣ್ಣಲ್ಲಾದರೋ ನೀರು ಧಾರಾಕಾರವಾಗಿ ಹರಿಯುತ್ತಿತ್ತು.
38 : ಇನ್ನೆಂದೂ ನೀವು ನನ್ನ ಮುಖವನ್ನು ಕಾಣಲಾರಿರಿ,’ ಎಂಬ ಅವನ ಮಾತು ಅವರನ್ನು ಅತೀವ ದುಃಖಕ್ಕೆ ಈಡು ಮಾಡಿತ್ತು. ಅವರು ಹಡಗಿನವರೆಗೂ ಹೋಗಿ ಅವನನ್ನು ಬೀಳ್ಕೊಟ್ಟರು.

ಕೀರ್ತನೆ 68:28-29, 32-33, 34-35 ಶ್ಲೋಕ.32
ಭೂರಾಜ್ಯಗಳೇ, ಸ್ತುತಿಸಿರಿ ದೇವರನು!
29 : ಜೆರುಸಲೇಮಿನ ನಿನ್ನ ಮಹಾದೇವಾಲಯದ ಪ್ರಯುಕ್ತ / ಅರಸರು ನಿನಗೆ ಕಾಣಿಕೆಯನು ತಂದೊಪ್ಪಿಸುವುದು ಅತಿಸೂಕ್ತ //
30 : ದಂಡಿಸು ಜಂಡು ಕಾಡುಮೃಗದಂಥಾ ನಾಡನು / ಗದರಿಸು ಹೋರಿ ದನಕರುಗಳಂಥಾ ನಾಡುಗಳನು // ಚದರಿಸು ಕಲಹಕಾಳಗ ಪ್ರಿಯ ಜನಾಂಗಗಳನು / ಅಡ್ಡಬೀಳಿಸು ನಿನಗೆ ಬೆಳ್ಳಿಗಟ್ಟಿ ತಂದವರನು //
31 : ರಾಯಭಾರಿಗಳಾಗಿ ಬರುವರು ಈಜಿಪ್ಟಿನ ಜನರು // ದೇವರಿಗೆ ಕೈ ಮುಗಿವರು ಇಥಿಯೋಪಿಯದವರು //
32 : ಭೂರಾಜ್ಯಗಳೇ, ಸ್ತುತಿಸಿರಿ ದೇವರನು / ಸಂಕೀರ್ತಿಸಿರಿ ನೀವೆಲ್ಲರು ಪ್ರಭುವನು //
33 : ಆದಿಮೊದಲು ಮೇಘಾರೂಢನಾಗಿರುವನು / ಕೊಂಡಾಡಿರಿ, ಗುಡುಗಿನಂತೆ ಗರ್ಜಿಸುವಾತನನು //
34 : ಸಾರಿರಿ ದೇವರಾ ಶಕ್ತಿಸಾಮಥ್ರ್ಯವನು / ಇಸ್ರಯೇಲಿಗೆ ತೋರಿದಾ ಪ್ರಭಾವವನು / ಗಗನವನು ಆವರಿಸಿರುವಾ ಪ್ರತಿಭೆಯನು //
35 : ಪರಮ ಪವಿತ್ರಾಲಯದಲ್ಲಿಹ ದೇವ ಭಯಭಕುತಿಗೆ ಪಾತ್ರ / ಪ್ರಜೆಗೆ ಪರಾಕ್ರಮವೀವ ಇಸ್ರಯೇಲ ದೇವನಿಗೆ ಸ್ತೋತ್ರ //

ಶುಭಸಂದೇಶ: ಯೊವಾನ್ನ 17.11-19

11 : ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ.
12 : ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರಗ್ರಂಥದ ಮಾತು ನೆರವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ.
13 : ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನಂದವು ಅವರ ಹೃದಯದಲ್ಲಿ ತುಂಬಿತುಳುಕುವಂತೆ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ.
14 : ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ.
15 : ಇವರನ್ನು ಲೋಕದಿಂದ ತೆಗೆದುಬಿಡಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತಿಲ್ಲ. ಆದರೆ ಕೇಡಿಗನಿಂದ ಇವರನ್ನು ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ.
16 : ನಾನು ಲೋಕಕ್ಕೆ ಹೇಗೆ ಸೇರಿದವನಲ್ಲವೋ ಹಾಗೆಯೇ ಇವರೂ ಲೋಕಕ್ಕೆ ಸೇರಿದವರಲ್ಲ.
17 : ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ.
18 : ನೀವು ನನ್ನನ್ನು ಲೋಕಕ್ಕೆ ಕಳಿಸಿದಂತೆ ನಾನು ಇವರನ್ನು ಲೋಕಕ್ಕೆ ಕಳಿಸಿದ್ದೇನೆ.
19 : ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.
------------------

ಪ್ರಭು ಕ್ರಿಸ್ತರ ``ಯಾಜಕ ಪ್ರಾರ್ಥನೆಯನ್ನು ನಾವು ಓದುತ್ತೇವೆ ಇಂದಿನ ಭಾಗದಲ್ಲಿ ಹನ್ನೆರಡು ಮಂದಿ ಶಿಷ್ಯರು, ಹನ್ನೇರಡು ರೀತಿಯ ಮನೋಭಾವದವರಾಗಿದ್ದರು. ಹೀಗಿರುವಾಗ ಇವರ ನಡುವೆ ಯಾವುದೇ ಭೇದಭಾವ, ಒಡಕು ಮೂಡಬಾರದೆಂದು ಅವರ ಒಗ್ಗಟ್ಟಿಗಾಗಿ ಕ್ರಿಸ್ತ ಪ್ರಾರ್ಥಿಸುತ್ತಾರೆ. ನಮ್ಮ ಯಾಜಕರು, ಧಾರ್ಮಿಕ ಮುಖಂಡರುಗಳ ನಡುವೆ ಒಗ್ಗಟ್ಟು, ಐಕ್ಯತೆ, ಪರಸ್ಪರ ವಿನಯ ವಿಧೇಯತೆ ಅವಶ್ಯವಾಗಿದೆ ಅವರುಗಳ ನಡುವೆ ವಿರೋಧದ ಕಂದಕ ಏರ್ಪಟ್ಟರೆ ಧರ್ಮಸಭೆಗೆ ಭಾರಿ ಪಟ್ಟು.
----------------
© 'ದನಿಮಾಧ್ಯಮ ಮನೆ

ದನಿ ಮಾಧ್ಯಮ ಮನೆಯ 'ದನಿ' ಇ-ಮಾಸಿಕಕ್ಕೆ ಬೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ

No comments:

Post a Comment