Thursday, 2 July 2020

ಜುಲೈ 25, 2020 ಶನಿವಾರ

ಜುಲೈ 25, 2020 ಶನಿವಾರ                                [ಕೆಂಪು]
ಸಂತ ಯಕೋಬ, (ಪ್ರೇಷಿತ)
ಮೊದಲ ವಾಚನ: 2 ಕೊರಿಂಥಿಯರಿಗೆ 4.7-15
ಕೀರ್ತನೆ 126: 1-6. ಶ್ಲೋಕ.5
ಅಳುತ್ತಳುತ್ತಾ ಬಿತ್ತುವವರು ನಲಿನಲಿಯುತ್ತಾ ಕೊಯ್ಯುವರು
ಶುಭಸಂದೇಶ: ಮತ್ತಾಯ 20.20-28
=================
2 ಕೊರಿಂಥಿಯರಿಗೆ 4.7-15
7 : ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ, ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ. 8 : ನಾವು ಇಕ್ಕಟ್ಟು ಬಿಕ್ಕಟ್ಟುಗಳಿಗೆ ಒಳಗಾಗಿದ್ದರೂ ನಜ್ಜುಗುಜ್ಜಾಗಲಿಲ್ಲ; ಸಂಶಯ ಸಂದೇಹಗಳಿಗೊಳಗಾದರೂ ನಿರಾಶೆಗೊಳ್ಳಲಿಲ್ಲ. 9 : ಶತ್ರುಗಳು ಅನೇಕರಿದ್ದರೂ ಮಿತ್ರನೊಬ್ಬನು ಇಲ್ಲದಿರಲಿಲ್ಲ. ಪ್ರಾಣಹಿಂಸೆಗಳಿಗೀಡಾಗಿದ್ದರೂ ಪ್ರಾಣನಷ್ಟವನ್ನು ಅನುಭವಿಸಲಿಲ್ಲ. 10 : ಯೇಸುವಿನ ದಿವ್ಯಜೀವವು ನಮ್ಮ ದೇಹದಲ್ಲಿ ಗೋಚರವಾಗುವಂತೆ ಅವರ ಮರಣಯಾತನೆಯನ್ನು ನಿರಂತರವಾಗಿ ಅನುಭವಿಸುತ್ತಾ ಬಾಳುತ್ತಿದ್ದೇವೆ. 11 : ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ. 12 : ಹೀಗೆ ನಮ್ಮಲ್ಲಿ ಸಾವು ಕಾರ್ಯಗತವಾಗುತ್ತಿದ್ದರೆ ನಿಮ್ಮಲ್ಲಿ ಜೀವ ಕಾರ್ಯಗತವಾಗುತ್ತಿದೆ. 13 : “ನಾನು ವಿಶ್ವಾಸವಿಟ್ಟೆನು. ಆದ್ದರಿಂದ ಮಾತನಾಡಿದೆನು,” ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ. ಇದೇ ಮನೋಭಾವನೆಯಿಂದ ಕೂಡಿರುವ ನಾವು ಮಾತನಾಡಲೇಬೇಕು. ಏಕೆಂದರೆ ನಮಗೆ ವಿಶ್ವಾಸವಿದೆ. 14 : ಪ್ರಭು ಯೇಸುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನು ಯೇಸುಕ್ರಿಸ್ತರೊಡನೆ ಪುನರುತ್ಥಾನಗೊಳಿಸಿ ತಮ್ಮ ಸಾನ್ನಿಧ್ಯಕ್ಕೆ ಬರಮಾಡಿಕೊಳ್ಳುವರು ಎಂಬುದನ್ನು ನಾವು ಬಲ್ಲೆವು. ಅಂತೆಯೇ ನಿಮ್ಮನ್ನೂ ಬರಮಾಡಿಕೊಳ್ಳುವರು 15 : ಇದೆಲ್ಲವೂ ನಿಮ್ಮ ಒಳಿತಿಗಾಗಿಯೇ. ಹೀಗೆ ಅನೇಕರಲ್ಲಿ ದೇವರ ವರಪ್ರಸಾದವು ಉಕ್ಕಿ ಹರಿಯುವುದು; ಅವರಲ್ಲಿ ಕೃತಜ್ಞತಾ ಭಾವನೆಯನ್ನು ಹೆಚ್ಚಿಸುವುದು; ಇದರಿಂದಾಗಿ ದೇವರ ಮಹಿಮೆ ಬೆಳಗುವುದು.
=======================
ಕೀರ್ತನೆ 126: 1-6. ಶ್ಲೋಕ.5 ಅಳುತ್ತಳುತ್ತಾ ಬಿತ್ತುವವರು ನಲಿನಲಿಯುತ್ತಾ ಕೊಯ್ಯುವರು 1 : ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ / ಅದೊಂದು ಕನಸು ಕಂಡಂತಿತ್ತು ನಮಗೆ ಆವಾಗ 2 : ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ / “ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ” / ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ 3 : ಪ್ರಭು ನಮಗೆ ಮಹತ್ಕಾರ್ಯ ಮಾಡಿದುದು ಖಚಿತ / ಎಂತಲೆ ನಾವಾನಂದಭರಿತರಾಗುವುದು ಉಚಿತ 4 : ಬತ್ತಿದ ನದಿಯಲಿ ನೀರು ಮರಳಿ ಉಕ್ಕಿ ಹರಿವಂತೆ / ನೀಡು ಸಿರಿ ಸೌಭಾಗ್ಯ, ಹೇ ಪ್ರಭೂ, ನಮಗೆ ಮತ್ತೆ 5 : ಅಳುತಳುತಾ ಬಿತ್ತುವವರು / ನಲಿನಲಿಯುತ್ತಾ ಕೊಯ್ಯುವರು 6 : ದುಃಖಿಸುತ್ತಾ ಬೀಜಬಿತ್ತಲು ಹೋದವನು | ಹರ್ಷಿಸುತ್ತಾ ಕೊಯ್ದು ತರುವನು ತೆನೆಗಳನು ||
======================
ಮತ್ತಾಯ 20.20-28 20 : ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬಂದಳು. “ತಮ್ಮಿಂದ ನನಗೊಂದು ಉಪಕಾರ ಆಗಬೇಕು,” ಎಂದು ಸ್ವಾಮಿಯ ಪಾದಕ್ಕೆರಗಿದಳು. 21 : “ನಿನ್ನ ಕೋರಿಕೆ ಏನು?” ಎಂದರು ಯೇಸು. ಅದಕ್ಕೆ ಅವಳು, “ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು,” ಎಂದು ಕೋರಿದಳು. 22 : ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು. 23 : ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು,” ಎಂದು ನುಡಿದರು. 24 : ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು. 25 : ಯೇಸುವಾದರೋ, ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, “ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನ ಮಾಡುತ್ತಾರೆ; ಜನನಾಯಕರು ಎನ್ನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನ ಮಾಡುತ್ತಾರೆ. 26 : ಇದು ನಿಮಗೆ ಗೊತ್ತು. ನೀವು ಹಾಗಿರಬಾರದು. 27 : ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮಗೆ ಸೇವಕನಾಗಿರಲಿ. ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ. 28 : ಹಾಗೆಯೇ ನರಪುತ್ರನು ಸೇವೆ ಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.
=====================
ಯೇಸು ಅನೇಕ ಅಸ್ವಸ್ಥರನ್ನು ಗುಣಪಡಿಸಿದ ನಂತರ ತಮ್ಮ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಆಜ್ಞೆ ಮಾಡುತ್ತಾರೆ, ವಿನಂತಿಯಲ್ಲ ಏಕೆ ಹೀಗೆ? - ಕ್ರಿಸ್ತರ ಸಮಯವಿನ್ನೂ ಬಂದಿರಲಿಲ್ಲ. ಅದಕ್ಕೆ ಮುಂಚೆ ಸಾಧಿಸುವುದು ಬಹಳಷ್ಟಿದೆ. ಅನಾವಶ್ಯಕ ಕಿತ್ತಾಟ, ತೊಂದರೆಯಲ್ಲಿ ಸಿಕ್ಕಿಕೊಂಡು ಬಿಡುವ ಸಾಧ್ಯತೆ ಹೆಚ್ಚು. - ಸಾರ್ವಜನಿಕವಾದ ಮನ್ನಣೆ ಕಿರೀಟದ ಹಂಗುಬೇಡ. - ಜನರಿಗೆ ಮೆಸ್ಸಾಯನ ನಿಜ ಅರ್ಥ ತಿಳಿಸಬೇಕಾಗಿತ್ತು. ಆತನೊಬ್ಬ ಕ್ರಾಂತಿಕಾರಿಯಲ್ಲ ಬದಲಿಗೆ ಆತ ದೀನ ಸೇವಕ, ದೀನ ಬಂಧು ಹಾಗೂ ನೋವು ಅನುಭವಿಸುವ ಸೇವಕ.
=================

@ದನಿ ಮಾಧ್ಯಮ ಮನೆ


No comments:

Post a Comment