06 ಮಾರ್ಚ್
2019, ಬೂದಿ ಬುಧವಾರ
ಉಪವಾಸ ಮತ್ತು ಮಾಂಸವರ್ಜಿತ ದಿನ
ಮೊದಲವಾಚನ:
ಯೊವೇಲ 2: 12-18
ಯೊವೇಲ 2: 12-18
12ಸರ್ವೇಶ್ವರ ಇಂತೆನ್ನುತ್ತಾರೆ: “ಈಗಲಾದರೂ ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಳ್ಳಿ. ಉಪವಾಸ ಕೈಗೊಂಡು, ಅತ್ತು ಗೋಳಾಡಿ.” 13ನಿಮ್ಮ ಉಡುಪುಗಳನ್ನು ಅಲ್ಲ, ಹೃದಯಗಳನ್ನು ಸೀಳಿರಿ: ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಕಡೆಗೆ ತಿರುಗಿಕೊಳ್ಳಿ; ಅವರು ದಯಾವಂತರು, ಕರುಣಾಮೂರ್ತಿ, ಸಹನಶೀಲ, ಪ್ರೀತಿಮಯ. ವಿಧಿಸಬೇಕಾಗಿದ್ದ ದಂಡನೆಗಾಗಿ ಮನನೊಂದುಕೊಳ್ಳುವಂಥವರು. 14ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು. 15ಸಿಯೋನ್ ಶಿಖರದ ಮೇಲೆ ನಿಂತು ಕೊಂಬೂದಿರಿ. ಉಪವಾಸ ದಿನವನ್ನು ಘೋಷಿಸಿರಿ. ಮಹಾಸಭೆಯನ್ನು ಕರೆಯಿರಿ. 16ಜನರನ್ನು ಒಟ್ಟುಗೂಡಿಸಿರಿ; ಸಭೆಯನ್ನು ಏರ್ಪಡಿಸಿರಿ; ವೃದ್ಧರನ್ನು, ಮಕ್ಕಳನ್ನು, ಮೊಲೆಗೂಸುಗಳನ್ನು ಕರೆತನ್ನಿರಿ. ವಧೂವರರು ತಮ್ಮ ಕಲ್ಯಾಣಗೃಹದಿಂದ ಹೊರಟುಬರಲಿ. 17ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರ ಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ” 18ಆಗ ಸರ್ವೇಶ್ವರ ತಮ್ಮ ದೇಶದ ಮೇಲೆ ಅಭಿಮಾನಗೊಂಡು, ತಮ್ಮ ಜನರಿಗೆ ಕರುಣೆ ತೋರಿದರು.
ಕೀರ್ತನೆ 51: 3-4, 5-6, 12-13, 14, 17
ಕೃಪಾಳು, ದೇವಾ, ಕರುಣಿಸೆನ್ನನು, ಅಳಿಸೆನ್ನ ದೋಷವನು
3ಒಪ್ಪಿಕೊಂಡೆನಿದೋ, ನಾನೇ ಅಪರಾಧಿ ಕಟ್ಟಿದಂತಿದೆ ಕಣ್ಗೆ ಪಾಪ ದಿನವಿಡಿ
4ಹೌದು ದೇವಾ, ನಿನಗೆ ದ್ರೋಹವೆಸಗಿದೆ ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ ನಿನ್ನ ನಿರ್ಣಯವು ನ್ಯಾಯಯುತ ನೀ ನೀಡುವ ತೀರ್ಪು ನಿರ್ಲಿಪ್ತ
5ನಾ ಜನಿಸಿದೆ ಪಾಪಪಂಕದಲೆ ದ್ರೋಹಿ ನಾ ಮಾತೃಗರ್ಭದಿಂದಲೆ
6ಅಂತರಂಗ ಶುದ್ಧಿಯನು ನೀ ಬಯಸುತಿ ಅಂತರ್ಯ ಜ್ಞಾನವನು ಉದಯಗೊಳಿಸುತಿ
12ಜೀವೋದ್ಧಾರವನು ಮರಳಿ ಸವಿಯುವಂತೆ ಮಾಡು ವಿಧೇಯನಾಗಿ ನಡೆವ ಸಿದ್ಧ ಮನಸ್ಸನು ನೀಡು
13ಬೋಧಿಸುವೆನಾಗ ನಿನ್ನ ಮಾರ್ಗವನು ದುರುಳರಿಗೆ ತಿರುಗಿಕೊಳ್ವರಾಗ ದ್ರೋಹಿಗಳು ನಿನ್ನ ಕಡೆಗೆ
14ಪ್ಪಿಸೆನ್ನನು ಸ್ವಾಮಿ ದೇವಾ, ರಕ್ತಾಪರಾಧದಿಂದ ನಿನ್ನ ಸತ್ಯಸಂಧತೆಯನು ಸಾರುವೆ ಮುಕ್ತ ಕಂಠದಿಂದ
17ಮುರಿದ ಮನವೇ ದೇವನೊಲಿವ ಯಜ್ಞವು ನೊಂದು ಬೆಂದ ಮನವನಾತ ಒಲ್ಲೆಯೆನನು
ಎರಡನೇ ವಾಚನ:
2 ಕೊರಿಂಥ 5: 20-6: 2
2 ಕೊರಿಂಥ 5: 20-6: 2
20ಸಹೋದರರೇ, ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ. 21ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು. ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು
ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ. “ಸುಪ್ರಸನ್ನತೆಯ ಕಾಲದಲ್ಲಿ ನಿಮ್ಮನ್ನಾಲಿಸಿದೆನು;
ಉದ್ಧಾರ ದಿನದಂದು ನಿನಗೆ ನೆರವಾದೆನು” ಎಂದಿದ್ದಾರೆ ದೇವರು. ಇದೇ ಆ ಸುಪ್ರಸನ್ನತೆಯ ಕಾಲ. ಇದೇ ಆ
ಉದ್ಧಾರದ ಸುದಿನ.
ಶುಭಸಂದೇಶ:
ಮತ್ತಾಯ 6: 1-6
ಮತ್ತಾಯ 6: 1-6
"ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು
ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು. 2ಅಂತೆಯೇ, ನೀನು ದಾನಧರ್ಮ
ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ
ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ
ಮಾಡುತ್ತಾರೆ.
ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ
ಖಚಿತವಾಗಿ ಹೇಳುತ್ತೇನೆ. 3ಆದರೆ ನೀನು ದಾನಧರ್ಮ
ಮಾಡುವಾಗ ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೂ ತಿಳಿಯದ ಹಾಗೆ ಗೋಪ್ಯವಾಗಿರಲಿ. 4ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ
ಪ್ರತಿಫಲವನ್ನು ಕೊಡುವರು. "
5"ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ
ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ
ತಿಳಿದಿರಲಿ.
6ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆ ಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ
ಪ್ರತಿಫಲವನ್ನು ಕೊಡುವರು. "
16"ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ
ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ
ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. 17ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ. 18ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ
ಪ್ರತಿಫಲ ಕೊಡುವರು. "
ಚಿಂತನೆ: ದೇವರೊಂದಿಗೆ
ನಮಗಿರುವ ಸಂಬಂಧವನ್ನು ಮೌಲ್ಯಮಾಪನ ಮಾಡಿಕೊಳ್ಳಲು ಸೂಕ್ತ ಕಾಲ ತಪಸ್ಸು ಕಾಲ. ನಮ್ಮ ಸಂಬಂಧಗಳನ್ನು
ನವೀಕರಿಸಿಕೊಳ್ಳಲು ಇರುವ ಉತ್ತಮ ಕಾಲ ತಪಸ್ಸು ಕಾಲ. ಬದಲಾವಣೆಗೆ ನಾಂದಿಯಾಡುವ ಕಾಲ ತಪಸ್ಸು ಕಾಲ.
ಪ್ರಾರ್ಥನೆ,
ದಾನ ಮತ್ತು ಧರ್ಮಗಳು ಬದಲಾವಣೆಗೆ ಪರಿಣಾಮಕಾರಿಯಾದ ಚಾಲನೆಯನ್ನು
ನೀಡುತ್ತವೆ. ಇವು ವಿಶ್ವಾಸ ಮತ್ತು ನಂಬಿಕೆಯ ಬೇರುಗಳನ್ನು ಸಶಕ್ತಗೊಳಿಸಿ ಸಂಬಂಧಗಳನ್ನು
ಪುನಶ್ಚೇನಗೊಳಿಸುತ್ತವೆ. ಹಾಗ ನಾವು ಮನಃ ಪೂರ್ವಕವಾಗಿ ದೇವರೆಡೆಗೆ ತಿರುಗಿಕೊಳ್ಳಲು ಸಾಧ್ಯ. ನಮ್ಮ
ದೇವರು ದಯಾವಂತರು,
ಕರುಣಾಮೂರ್ತಿ, ಸಹನಶೀಲರು, ಪ್ರೀತಿಮಯರು ಆಗಿದ್ದಾರೆ. ನಮ್ಮ ತಪ್ಪಿಗೆ ದಂಡನೆ ನೀಡಲು ಮನ
ನೊಂದುಕೊಳ್ಳುವವರಾಗಿದ್ದಾರೆ ಎಂದು ಪ್ರವಾದಿ ಯೊವೇಲನು ನಮ್ಮನ್ನು ಎಚ್ಚರಿಸುತ್ತಿದ್ದಾನೆ. ಬನ್ನಿ
ವಿಭೂತಿಯನ್ನು ಧರಿಸಿ ಪ್ರಾರ್ಥನೆ, ದಾನ ಮತ್ತು
ಧರ್ಮಗಳಲ್ಲಿ ನಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ನಮ್ಮ ಶಿಥಿಲಗೊಂಡ ಸಂಬಂಧಗಳನ್ನು
ಸರಿಪಡಿಸಿಕೊಳ್ಳೋಣ.
ಚಿತ್ರ: ಗೂಗಲ್ ಕೃಪೆ
© 'ದನಿ' ಮಾಧ್ಯಮ ಮನೆ

No comments:
Post a Comment